Tuesday, June 9, 2026
Home ದೇಶ/ವಿದೇಶಅ*ತ್ಯಾಚಾರ ಪ್ರಕರಣ ಮಾಹಿತಿ ಕೊಡುವ ವೇಳೆ ಬಿಕ್ಕಿ ಬಿಕ್ಕಿ ನಗುತ್ತಿದ್ದ ಮೂವರು ಪೊಲೀಸ್ ಅಧಿಕಾರಿಗಳ ಅಮಾನತು…

ಅ*ತ್ಯಾಚಾರ ಪ್ರಕರಣ ಮಾಹಿತಿ ಕೊಡುವ ವೇಳೆ ಬಿಕ್ಕಿ ಬಿಕ್ಕಿ ನಗುತ್ತಿದ್ದ ಮೂವರು ಪೊಲೀಸ್ ಅಧಿಕಾರಿಗಳ ಅಮಾನತು…

by Dharmaraju
0 comments

ಚೆನ್ನೈ: 10 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಹತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ, ಇಂತಹ ಅತ್ಯಂತ ಸೂಕ್ಷ್ಮ ಹಾಗೂ ದಾರುಣ ಘಟನೆಯ ತನಿಖೆ ನಡೆಸುವಾಗ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಮೂವರು ಐಪಿಎಸ್ (IPS) ಅಧಿಕಾರಿಗಳು ನಡೆದುಕೊಂಡ ರೀತಿ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಆ ಮೂವರನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು (Suspend) ಮಾಡಿ ಆದೇಶಿಸಿದ್ದಾರೆ.

ಸುಳೂರು ಮೂಲದ 10 ವರ್ಷದ ಬಾಲಕಿಯೊಬ್ಬಳು ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ದಿಢೀರನೆ ನಾಪತ್ತೆಯಾಗಿದ್ದಳು. ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಹುಡುಕಾಟ ನಡೆಸಿದ ನಂತರ, ಬಾಲಕಿಯ ಶವವು ಸಮೀಪದ ಕೆರೆಯ ಬಳಿ ಪತ್ತೆಯಾಗಿತ್ತು. ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದರೆ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆಯನ್ನು ಖಂಡಿಸಿ ಮೃತ ಬಾಲಕಿಯ ಕುಟುಂಬದವರು ಮತ್ತು ಸಾರ್ವಜನಿಕರು ತಕ್ಷಣವೇ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಸ್ಥಳದಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದರು.

ಬಾಲಕಿಯ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದು, ಈಗಾಗಲೇ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು 33 ವರ್ಷದ ದಿನಗೂಲಿ ಕಾರ್ಮಿಕ ಕಾರ್ತಿಕ್ ಮತ್ತು ಮೋಹನ್‌ರಾಜ್ ಎಂದು ಗುರುತಿಸಲಾಗಿದೆ.

ಪ್ರಕರಣದ ತನಿಖೆಯ ಪ್ರಗತಿಯನ್ನು ವಿವರಿಸಲು ಪೊಲೀಸ್ ಇಲಾಖೆಯು ಪತ್ರಿಕಾಗೋಷ್ಠಿ ಹಮ್ಮಿಕೊಂಡಿತ್ತು. ಈ ವೇಳೆ ವೇದಿಕೆಯಲ್ಲಿದ್ದ ಒಬ್ಬ ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳು ಗಂಭೀರವಾದ ಈ ಕೊಲೆ ಪ್ರಕರಣದ ಬಗ್ಗೆ ಮಾತನಾಡುವಾಗಲೇ ಪರಸ್ಪರ ನಗುತ್ತಾ, ಮುಗುಳ್ನಗುತ್ತಾ ಇರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಪೊಲೀಸರ ವಿರುದ್ಧ ಚಾಟಿ ಬೀಸಿದ್ದಾರೆ.

“ನೊಂದ ಕುಟುಂಬದ ಗಾಯದ ಮೇಲೆ ಉಪ್ಪು ಸವರುವಂತೆ ಈ ನಾಗರಿಕ ಸೇವಕರು ವರ್ತಿಸಿದ್ದಾರೆ” ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡ ಅಧಿಕಾರಿಗಳ ವಿರುದ್ಧ ಹಿರಿಯ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕೇಳಿಬಂದಿದೆ.

ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ:
ಈ ಅಧಿಕಾರಿಗಳು ನಗುತ್ತಿರುವ ದೃಶ್ಯಗಳು ಮಾಧ್ಯಮಗಳು ಮತ್ತು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟಿಜನ್‌ಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದರು. ಒಂದು ಮಗು ಸತ್ತಾಗಲೂ ನಿಮಗೆ ಕನಿಷ್ಠ ಮಾನವೀಯತೆ ಇಲ್ಲವೇ? ನೀವೂ ಒಬ್ಬ ಮಹಿಳೆ, ನಿಮಗೂ ಮಕ್ಕಳಿರಬಹುದು. ನಿಮ್ಮ ಸ್ವಂತ ಮಗಳಿಗೆ ಹೀಗಾಗಿದ್ದರೆ ಹೀಗೆಯೇ ನಗುತ್ತಿದ್ದಿರಾ? ಎಂದು ಸಾರ್ವಜನಿಕರು ಆ ಐಜಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ತಕ್ಷಣವೇ ಆ್ಯಕ್ಷನ್ ತಗೊಂಡ ಸಿಎಂ ವಿಜಯ್
ಈ ವಿಷಯ ಮುಖ್ಯಮಂತ್ರಿ ವಿಜಯ್ ಅವರ ಗಮನಕ್ಕೆ ಬರುತ್ತಿದ್ದಂತೆ ಅವರು ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನ ತೋರಿದ ಆ ಮೂವರೂ ಐಪಿಎಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟರ್ (X) ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ಸಿಎಂ ವಿಜಯ್:”ಪೊಲೀಸರು ಸಾರ್ವಜನಿಕರಿಗೆ ಉತ್ತರದಾಯಿಯಾಗಿರಬೇಕು.” ಇಂತಹ ಸೂಕ್ಷ್ಮ ಪ್ರಕರಣಗಳನ್ನು ನಿರ್ವಹಿಸುವಾಗ ಅಧಿಕಾರಿಗಳು ಗಂಭೀರತೆ ಕಾಯ್ದುಕೊಳ್ಳಬೇಕು.
“ಬೇಜವಾಬ್ದಾರಿಯಿಂದ ವರ್ತಿಸುವ ಅಧಿಕಾರಿಗಳ ಮೇಲೆ ಯಾವುದೇ ಕರುಣೆ ತೋರಿಸುವ ಪ್ರಶ್ನೆಯೇ ಇಲ್ಲ” ಎಂದು ಖಡಕ್ ಆಗಿ ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿ ವಿಜಯ್ ಅವರ ಈ ತ್ವರಿತ ಮತ್ತು ಕಠಿಣ ನಿರ್ಧಾರಕ್ಕೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬೇರೆ ರಾಜ್ಯಗಳ ಮುಖ್ಯಮಂತ್ರಿಗಳೂ ವಿಜಯ್ ಅವರ ಈ ನಡೆಯನ್ನು ನೋಡಿ ಕಲಿಯಬೇಕು ಎಂದು ನೆಟಿಜನ್‌ಗಳು ಕೊಂಡಾಡುತ್ತಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳಿಗೆ ತಕ್ಕ ಶಾಸ್ತಿ ಮಾಡಿದ್ದರಿಂದ, ಮುಂದಿನ ದಿನಗಳಲ್ಲಾದರೂ ಪೊಲೀಸರು ಸಾರ್ವಜನಿಕರೊಂದಿಗೆ ಮತ್ತು ಇಂತಹ ಪ್ರಕರಣಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಕಲಿಯುತ್ತಾರೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

You may also like

Leave a Comment