ತುಮಕೂರು: ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಭಾರೀ ದುರಂತ ತಪ್ಪಿದೆ. ಬಸ್‌ನಲ್ಲಿ ಭರ್ತಿಯಾಗಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ತಿಪಟೂರು ಡಿಪೋಗೆ ಸೇರಿದ ಈ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು. ಗುಬ್ಬಿ ಸಮೀಪದ ಕಳ್ಳಿಪಾಳ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಐದಾರು ಪ್ರಯಾಣಿಕರಿಗೆ ಗಂಭೀರ ಗಾಯ ಅಪಘಾತದಲ್ಲಿ ಐದಾರು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 40ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಯಾಣಿಕರ ಪ್ರಕಾರ, ಬಸ್ ಅತಿ ವೇಗವಾಗಿ ಹೋಗುತ್ತಿದ್ದು, ಚಾಲಕನು ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಅಪಘಾತದ ಕಾರಣ ತನಿಖೆ ನಡೆಯುತ್ತಿದೆ. ಪೊಲೀಸರು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಅಪಘಾತದಿಂದ ರಸ್ತೆ ಸಂಚಾರಕ್ಕೆ ಸ್ವಲ್ಪ ಸಮಯ ಅಡಚಣೆಯಾಗಿದ್ದು, ಪೊಲೀಸ್ ಮತ್ತು ರಸ್ತೆ ಸಾರಿಗೆ ಅಧಿಕಾರಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.