ಗೃಹಲಕ್ಷ್ಮಿ ಯೋಜನೆಯ ನೂರಾರು ಕೋಟಿ ರು. ಅನರ್ಹರ ಖಾತೆಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಆಹ್ವಾನಿಸುತ್ತಿದ್ದು, ಇದೇ ರೀತಿ ‘ಗೃಹ ಜ್ಯೋತಿ’ ದುರ್ಬಳಕೆ ತಡೆಯಲು ಮತ್ತೊಮ್ಮೆ ಅರ್ಜಿ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ರಾಜ್ಯ ಮಟ್ಟದ ಪ್ರಗತಿ ಪರಿಶೀಲನೆ ಸಭೆನಡೆಸಿದ ಅವರು, ಗ್ಯಾರಂಟಿಗಳ ದುರ್ಬಳಕೆ ತಡೆಯುವ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ಪಂಚ ಗ್ಯಾರಂಟಿಗಳಲ್ಲೂ ದುರ್ಬಳಕೆ, ಸೋರಿಕೆ ತಡೆಯಬೇಕು. ಅರ್ಹರಿಗೆ ಮಾತ್ರ ಯೋಜನೆ ಲಾಭ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಎರಡೂ ಯೋಜನೆಗಳಿಗೂ ಹೊಸದಾಗಿ ಅರ್ಜಿ ಪಡೆಯಬೇಕು. ಆ ಮೂಲಕ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಬೇಕು ಎಂದು ಸೂಚಿಸಿದ್ದಾರೆ.
ಗೃಹಬಳಕೆ ಹೆಸರಿನಲ್ಲಿ ಪಡೆದ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ ಅದನ್ನು ಅಂಗಡಿಗಳ ಬಳಕೆಗೂ ಪಡೆಯುತ್ತಿದ್ದಾರೆ, ಇನ್ನು ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪೈಕಿ ಹಲವರು ಸಾವನ್ನಪ್ಪಿದ್ದರು ಅವರ ಖಾತೆಗೆ ಹಣ ಜಮೆಯಾಗುತ್ತಿದೆ. ಈ ಎಲ್ಲಾ ಗೊಂದಲಗಳನ್ನು ಸರಿಪಡಿಸುವ ಬಗ್ಗೆ ಕ್ರಮಕ್ಕೆ ಸೂಚಿಸಿದರು.
ಗೃಹಲಕ್ಷ್ಮಿ ನಿಲ್ಲಿಸಲ್ಲ;
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಲ್ಲಿ ಕೆಲವರು ನಿಧನರಾಗಿದ್ದಾರೆ. ಅವರ ಹೆಸರಲ್ಲಿ ಬೇರೆಯವರು 100 ಕೋಟಿ ರು.ಗೂ ಹೆಚ್ಚು ಹಣ ಪಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಅರ್ಹ ಫಲಾನು ಭವಿಗಳಿಗೆ ಯೋಜನೆ ತಲುಪುತ್ತಿದೆಯೇ, ಇಲ್ಲವೇ ಎಂದು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ.
ಮತದ ಹಕ್ಕು ಇಲ್ಲದಿದ್ದರೆ ಗ್ಯಾರಂಟಿ ಇಲ್ಲ;
ಮತದಾನದ ಹಕ್ಕು ಇಲ್ಲದಿದ್ದರೆ ಗ್ಯಾರಂಟಿ, ಪಿಂಚಣಿ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯ ಸಿಗುವುದಿಲ್ಲ. ಹೀಗಾಗಿ ಎಸ್‌ಐಆರ್ ಪ್ರಕ್ರಿಯ ವೇಳೆ ಅಧಿಕಾರಿಗಳು ಪ್ರತಿ ಗ್ರಾಮ ಪಂಚಾಯ್ತಿಗೆ ಹೋಗಿ ಮತದಾರರಿಗೆ ಮಾರ್ಗದರ್ಶನ ನೀಡುವ ಜತೆಗೆ ಮತದಾನದ ಹಕ್ಕು ಪಡೆಯಲು ಅಗತ್ಯರುವ ಎಲ್ಲಾ ದಾಖಲೆಗಳನ್ನು ಜನರಿಗೆ ಒದಗಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶನಿವಾರ ಅವರು ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆಯಲ್ಲಿ ಈ ಮಾತು ಹೇಳಿದರು.