ಮಹದೇವಪುರ: ಬೆಂಗಳೂರು ಪೂರ್ವ ನಗರ ಪಾಲಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ಇಂದು 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲಿಕೆಯ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಧ್ವಜಾರೋಹಣ ನೆರವೇರಿಸಿ, ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿಯ ಮಹತ್ವವನ್ನು ಸ್ಮರಿಸಿದರು.

ಧ್ವಜಾರೋಹಣದ ಬಳಿಕ ಮಾತನಾಡಿದ ಆಯುಕ್ತರಾದ ಡಿ.ಎಸ್. ರಮೇಶ್ ಅವರು, ಕನ್ನಡ ಭಾಷೆ ಮತ್ತು ನಾಡಿನ ಏಕತೆಗಾಗಿ ಶ್ರಮಿಸಿದ ಮಹನೀಯರ ಕೊಡುಗೆಯನ್ನು ಸ್ಮರಿಸಿದರು. ಕನ್ನಡ ಭಾಷೆಯ ಬೆಳವಣಿಗೆ, ಉಳಿವು ಮತ್ತು ಸಮೃದ್ಧಿಗಾಗಿ ಅನೇಕ ಹಿರಿಯರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ಪರಿಶ್ರಮ, ಹೋರಾಟ ಮತ್ತು ತ್ಯಾಗದ ಫಲವಾಗಿ ಕನ್ನಡ ಭಾಷೆ ಹಾಗೂ ಕರ್ನಾಟಕದ ಸಾಂಸ್ಕೃತಿಕ ಪರಂಪರೆ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದೆ ಎಂದು ತಿಳಿಸಿದರು.

ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ; ಅದು ನಮ್ಮ ನಾಡಿನ ಇತಿಹಾಸ, ಸಂಸ್ಕೃತಿ, ಪರಂಪರೆ ಮತ್ತು ಜೀವನ ಮೌಲ್ಯಗಳ ಪ್ರತೀಕವಾಗಿದೆ. ಕನ್ನಡ ನಾಡಿನ ಶ್ರೀಮಂತ ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ದೈನಂದಿನ ಜೀವನದಲ್ಲಿ ಕನ್ನಡ ಭಾಷೆಯ ಬಳಕೆಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ, ಕನ್ನಡದ ಗೌರವ ಮತ್ತು ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಬೆಂಗಳೂರು ಪೂರ್ವ ನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಕನ್ನಡದಲ್ಲಿಯೇ ಸಂವಹನ ನಡೆಸಲು ಆದ್ಯತೆ ನೀಡಬೇಕು. ಆಡಳಿತ ಮತ್ತು ಸಾರ್ವಜನಿಕ ಸೇವೆಗಳಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಉತ್ತೇಜಿಸುವ ಮೂಲಕ ಕನ್ನಡ ರಾಜ್ಯೋತ್ಸವದ ಆಶಯವನ್ನು ಕಾರ್ಯರೂಪಕ್ಕೆ ತರಬೇಕು ಎಂದು ತಿಳಿಸಿದರು.

ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ, ನಾಡಿನ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿ, ಸಮಸ್ತ ಅಧಿಕಾರಿಗಳು, ಸಿಬ್ಬಂದಿ ಹಾಗೂ ನಾಗರಿಕರಿಗೆ 71ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗಿ
ಕಾರ್ಯಕ್ರಮದಲ್ಲಿ ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್, ಅಪರ ಆಯುಕ್ತರು (ಕಂದಾಯ) ಪ್ರಜ್ಞಾ ಅಮ್ಮೆಂಬಳ, ಮಹದೇವಪುರ ವಲಯದ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ಕೆ., ಮುಖ್ಯ ಅಭಿಯಂತರರಾದ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಪಾಲಿಕೆಯ ಸಿಬ್ಬಂದಿ ಉಪಸ್ಥಿತರಿದ್ದು, ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಿದರು.
ಕನ್ನಡ ಭಾಷೆಯ ಗೌರವ, ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಸಂಕಲ್ಪದೊಂದಿಗೆ ಕಾರ್ಯಕ್ರಮವು ಸಂಭ್ರಮದಿಂದ ನೆರವೇರಿತು.