ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ: 13 ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ
ರಾಜ್ಯ


ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ 1 ವಾರ ರಾಜ್ಯದ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಅದರಲ್ಲೂ ಮಂಗಳವಾರ ಮತ್ತು ಬುಧವಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ಮತ್ತು ಎಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆ ವರದಿಯಂತೆ ಮಂಗಳವಾರ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗಾಳಿ ಸಹಿತ ಭಾರೀ ಮಳೆಯ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಭಾಗವಾಗಿರುವ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ (ಗಂಟೆಗೆ 40-50 ಕಿ.ಮೀ) ಬಿರುಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ (ಗಂಟೆಗೆ 40-50 ಕಿ.ಮೀ) ಬಿರುಗಾಳಿಯೊಂದಿಗೆ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅದೇ ರೀತಿ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ (ಗಂಟೆಗೆ 40-50 ಕಿ.ಮೀ) ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ ವಿಜಯಪುರ ಗದಗ ಮತ್ತು ಕೊಪ್ಪಳ ಮತ್ತು ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನಲ್ಲಿ, ಒಂದು ಅಥವಾ ಎರಡು ಸ್ಥಳಗಳಲ್ಲಿ (ಗಂಟೆಗೆ 40-50 ಕಿ.ಮೀ) ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದಾದ್ಯಂದ ಮುಂದಿನ 7 ದಿನಗಳವರೆಗೆ ಇದೇ ರೀತಿಯ ಹವಾಮಾನ ಪರಿಸ್ಥಿತಿ ಕಂಡುಬರಬಹುದು, ಆದರೆ ಸ್ಥಳಗಳಲ್ಲಿ ಸ್ವಲ್ಪ ವ್ಯತ್ಯಾಸವಿರಬಹುದು. ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯ ಸಮಯದಲ್ಲಿ ಮೀನುಗಾರ ಸಮುದಾಯ ಸಮುದ್ರಕ್ಕೆ ಇಳಿಯಬಾರದು ಎಂದು ಐಎಂಡಿ ಸಲಹೆ ನೀಡಿದೆ.
ಭಾರೀ ಮಳೆಯ ಸಮಯದಲ್ಲಿ ಜನರು ಹೊರಗೆ ಹೋಗಬಾರದು ಮತ್ತು ಆಶ್ರಯಕ್ಕಾಗಿ ಮರಗಳ ಕೆಳಗೆ ನಿಲ್ಲಬಾರದು ಎಂದೂ ಸೂಚಿಸಿದೆ.