ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ. ಬಂಧನದ ಭೀತಿಯಲ್ಲಿ ದೇವಸ್ಥಾನ ಭೇಟಿ !
ಸ್ಥಳೀಯ ಸುದ್ದಿ


ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಎದುರಾಗಿದೆ.ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ರದ್ದು ಮಾಡುವಂತೆ ಸಿಐಡಿ ಬುಧವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಈ ಹಿಂದಿನ ಆದೇಶ ತೆರವು ಮಾಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ. ವಿಚಾರಣೆ ವೇಳೆ ಬೈರತಿ ಬಸವರಾಜ್ ಸುಳ್ಳು ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಈಗ ಬೈರತಿ ಬಸವರಾಜ್ ಬಂಧಿಸಿ ವಿಚಾರಣೆಗೊಳಪಡಿಸಬೇಕಿದೆ ಎಂದು ಪ್ರಾಸಿಕ್ಯೂಷನ್ ಪರ ಎಸ್‌ಪಿಪಿ ಬಿ.ಎನ್.ಜಗದೀಶ್ ವಾದ ಮಂಡಿಸಿದ್ದಾರೆ
ಆದರೆ, ಈ ಅರ್ಜಿಗೆ ಬೈರತಿ ಬಸವರಾಜ್ ಅವರ ವಕೀಲರಾದ ಹಿರಿಯ ವಕೀಲ ಸಂದೇಶ್ ಚೌಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಸಿಐಡಿ ತನಿಖೆಗೆ ತಮ್ಮ ಕಕ್ಷಿದಾರರನ್ನು ಕರೆದಿಲ್ಲ ಎಂದು ಅವರು ವಾದಿಸಿದ್ದಾರೆ. ಈ ಹಿಂದೆ ತನಿಖೆಗೆ ಕರೆದಾಗಲೆಲ್ಲಾ ಬೈರತಿ ಬಸವರಾಜ್ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಚೌಟ ತಿಳಿಸಿದ್ದಾರೆ.
ಶಾಸಕ ಭೈರತಿ ಬಸವರಾಜ್ ದೇವಸ್ಥಾನ ಭೇಟಿ:
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ಬಂಧನದ ಭೀತಿ ವ್ಯಕ್ತವಾಗುತ್ತಿರುವ ಹಿನ್ನೆಲೆ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.
ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಂತರ , ಅಲ್ಲಿಂದ ಕೊಟ್ಟಿಗೆಹಾರದ ಸೀತಾರಾಮ ದೇವಾಲಯಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ.